ವಿಜಯಪುರ: ವ್ಯಕ್ತಿಯ ಜೀವನ, ಸ್ವಾತಂತ್ರ್ಯ ಸಮಾನತೆ ಮತ್ತು ಘನತೆ ಕುರಿತ ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಮತ್ತೊಬ್ಬರ ಸ್ವಾತಂತ್ರ್ಯವನ್ನು ಗೌರವಿಸಿ ಈ ಸಮಾಜದಲ್ಲಿ ಬದುಕಬೇಕೆಂದು ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಅವರು ಮಾತನಾಡಿ, ಸಮಾಜದಲ್ಲಿ ಶಾಂತಿ ನೆಲೆಸಲು ಮಾನವ ಹಕ್ಕುಗಳು ರಕ್ಷಣೆ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬರು ಮಾನವ ಹಕ್ಕುಗಳ ಕುರಿತು ಅರಿವು ಹೊಂದಿರಬೇಕು ಎಂದು ಅವರು ಹೇಳಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ತಹಶೀಲ್ದಾರ ಸಿದರಾಯ ಭೋಸಗಿ, ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಘಾಟಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.