ವಿಜಯಪುರ: ನಾನು ಹಿಂದು, ನಮ್ಮಪ್ಪ-ಅವ್ವನೂ ಹಿಂದೂ ಎಂದು ಸಿಟಿ ರವಿಗೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಶನಿವಾರ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು. ನಾನು ಹಿಂದು ಅಲ್ಲವಾ, ನಮ್ಮವ್ವ-ನಮ್ಮಪ್ಪ ಹಿಂದುಗಳಲ್ಲವಾ? ಸಿ.ಟಿ. ರವಿ ಹೇಳಿದ ಮಾತ್ರಕ್ಕೆ ನಾನು ಮುಸ್ಲಿಂನಾಗಿ ಬಿಡುತ್ತೇನಾ? ಎಂದು ಕಿಡಿಕಾರಿದರು.
ಬಿಜೆಪಿಗೆ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬದಲಾವಣೆ ಮಾಡಲು ಆಗಿಲ್ಲ. ರೈತರ ಬಿಕ್ಕಟ್ಟಿಗೆ ಪರಿಹಾರ ಒದಗಿಸಲಾಗಿಲ್ಲ. ರೈತರ ಸಾಲ ದುಪ್ಪಟ್ಟಾಯಿತೇ ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಅಲ್ಲದೇ, ಈಗ ಏಳು ಕೆಜಿ ಇದ್ದ ಅಕ್ಕಿ 5 ಕೆಜಿಗೆ ಇಳಿಸಿದ್ದು ಸುಳ್ಳಾ?
ಅಕ್ಕಿ ಕೇಂದ್ರ ಸರ್ಕಾರದ್ದು, ಚೀಲ ಮಾತ್ರ ಕಾಂಗ್ರೆಸ್ನದ್ದು ಎನ್ನುವ ಬಿಜೆಪಿಗರು ತಮ್ಮದೇ ಪಕ್ಷದ ಆಡಳಿತವಿರುವ ಉತ್ತರ ಪ್ರದೇಶ, ಗುಜರಾತ, ಅಸ್ಸಾಂನಲ್ಲಿ ಏಕೆ ಕೊಡುತ್ತಿಲ್ಲ..? ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದೇವೆ ಎಂದರು.
ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲೆ ರೌಡಿ ಶೀಟರ್ ಪ್ರಕರಣ ರೌಡಿ ಶೀಟರ್ ಪ್ರಕರಣ ದಾಖಲಿಸಬಾರದು. ನೆಲ, ಜಲ, ಭಾಷೆಯ ಉಳಿಯುವ ಎಲ್ಲರ ಮೂಲಭೂತ ಹಕ್ಕು ಆಗಿದೆ. ರಾಜ್ಯಗಳ ಸ್ವಾಯತ್ತ ಹಕ್ಕು ಯಾರೂ ಕಸಿದುಕೊಳ್ಳುವಂತಿಲ್ಲ. ಮಹಾಜನ ವರದಿಯಲ್ಲಿ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಲಾಗಿದೆ. ಆದರೂ ಕಾಲು ಕೆರೆದುಕೊಂಡು ಜಗಳಕ್ಕೆ ಬರುವುದು ಸರಿಯಲ್ಲ ಎಂದರು.