ವಿಜಯಪುರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯ 8 ವಿಧಾನಸಭಾ ಮತಕ್ಷೇತ್ರಗಳ ವ್ಯಾಪ್ತಿಯಲ್ಲಿ ಈವರೆಗೆ 7.91 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ವಿವಿಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ ಅವರು ತಿಳಿಸಿದ್ದಾರೆ. ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಜಿಲ್ಲೆಯಾದ್ಯಂತ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ ಗಳನ್ನು ಸ್ಥಾಪಿಸಿ ಜಿಲ್ಲೆಯ ಎಲ್ಲ ಡಿಎಸ್ಪಿ, ಸಿಪಿಐ, ಪಿಎಸ್ಐ ಹಾಗೂ ಸಿಬ್ಬಂದಿಗಳು ತೀವ್ರ ನಿಗಾವಹಿಸಿ, ಅಕ್ರಮ ಸಾಗಿಸುತ್ತಿರುವ ದಾಖಲೆ ರಹಿತ 2.6 ಕೋಟಿ ನಗದು ಹಣ, 10ಲಕ್ಷಕ್ಕೂ ಅಧಿಕ ಮೌಲ್ಯದ ಅಕ್ರಮ ಸರಾಯಿ, 35 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳು, 93 ಲಕ್ಷ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ವಸ್ತುಗಳು, ಮತದಾರರಿಗೆ ಹಂಚಲು ಸಂಗ್ರಹಿಸಿಡಲಾಗಿದ್ದ 3.91 ಕೋಟಿ ರೂ. ಮೌಲ್ಯದ ಬಟ್ಟೆ ಹಾಗೂ ಗೃಹ ಬಳಕೆಯ ವಸ್ತುಗಳು ಸೇರಿದಂತೆ 7.91 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.