ವಿಜಯಪುರ: ರಾಜ್ಯದಲ್ಲಿ ಬಿಜೆಪಿ ಪರಿಸ್ಥಿತಿ ಹದಗೆಟ್ಟು ಹೋಗಿದೆ ಎಂದು ಸಚಿವ ಎಂಬಿ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮುಳುಗಿ ಹೋಗಿರುವ ಹಡಗು ಎಂದು ಲೇವಡಿ ಮಾಡಿದರು. ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ. ಚೈತ್ರಾ ಕುಂದಾಪುರ ಹಾಗೂ ಉಳಿದವರು ಬಿಜೆಪಿ ಟಿಕೆಟ್ ಹೆಸರಿನಲ್ಲಿ ಜನರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ, ರಾಜ್ಯದಲ್ಲಿ ಬಿಜೆಪಿ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಮಾಡಲು ಆಗುತ್ತಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲನ್ನು ಬಿಜೆಪಿ ಚೇತರಿಸಿಕೊಂಡಿಲ್ಲ ಎಂದರು. ಇದೇ ವೇಳೆ ವಿಜಯಪುರ ನಗರದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಟ್ಟಡದ ಭೂಮಿ ಪೂಜೆಯನ್ನು ಸಚಿವ ಎಂಬಿ ಪಾಟೀಲ ನೆರವೇರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.