ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರ ಅವರನ್ನು ಜುಲೈ 18ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ನಂತರ ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜುಲೈ 22ರ ವರೆಗೆ ಕಸ್ಟಡಿ ಅವಧಿಯನ್ನು ವಿಸ್ತರಿಸಿತ್ತು.
ಇಂದು ಮತ್ತೆ ನಾಗೇಂದ್ರ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ‘ಯ ವಿಶೇಷ ನ್ಯಾಯಾಲಯದ (ಸಿಸಿಎಚ್-82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಬೆಳಗ್ಗೆ 11.30ಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಅವರನ್ನು ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.