ವಿಜಯಪುರ: ಅಶ್ಲೀಲ ವಿಡಿಯೋ(Video) ಅಪಲೋಡ್ ಮಾಡಿದರೆ ಹುಷಾರ್, ಈಗಾಗಲೇ ಈ ರೀತಿಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಯಾರೂ ಸಹ ಈ ರೀತಿಯ ಕೃತ್ಯ ಎಸಗಬಾರದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎಚ್.ಡಿ. ಆನಂದಕುಮಾರ ಖಡಕ್ ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ(Social Media) ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಅಪಲೋಡ್ ಮಾಡುವುದು, ಫಾರ್ವರ್ಡ್ ಮಾಡುವುದು ಸಹ ಅಪರಾಧ, ಹೀಗಾಗಿ ಈ ರೀತಿಯ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಶೋಷಣೆ ಮಾಡುವ ಒಟ್ಟು 13 ಪ್ರಕರಣಗಳಿಗೆ ಸಂಬಂದಿಸಿದಂತೆ 13 ಜನರನ್ನು ಬಂಧಿಸಲಾಗಿದ್ದು, ಬಂಧಿತರಿಂದ 13 ಮೊಬೈಲ್ ಜಪ್ತಿ ಮಾಡಿಕೊಳ್ಳಲಗಿದೆ, ಈ ಎಲ್ಲರ ಸಾಮಾಜಿಕ ಜಾಲತಾಣ ಖಾತೆಯನ್ನು ನಿಷ್ಕ್ರಯಗೊಳಿಸಲಾಗಿದೆ ಎಂದು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಯುವಜನತೆ ಔಷಧಿ ಹೆಸರಿನಲ್ಲಿ ಮಾದಕ ದ್ರವ್ಯಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬರುತ್ತಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿದ್ದು, ಕಡ್ಡಾಯವಾಗಿ ನಿಯಮಾವಳಿ ಅಧರಿಸಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದವರಿಗೆ ಔಷಧಿ ವಿತರಿಸಲು ಡ್ರಗ್ಸ್ (Drug) ಮಾರಾಟ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಒಂದು ರೀತಿ ಗೀಳಾಗಿ ಔಷಧಿ ಸೇವನೆ ಮಾಡುವವರು ಔಷಧ ಖರೀದಿಗೆ ಬಂದರೆ ಅಂತಹವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.