ತಾಪಮಾನ ಸಾರ್ವಜನಿಕರಿಗೆ ಡಿಸಿ ಸಲಹೆ-ಸೂಚನೆ‌

Karnataka 1 News
ತಾಪಮಾನ ಸಾರ್ವಜನಿಕರಿಗೆ ಡಿಸಿ ಸಲಹೆ-ಸೂಚನೆ‌

ವಿಜಯಪುರ: ಅತೀ ಹೆಚ್ಚು ತಾಪಮಾನ ಸಮಯದಲ್ಲಿ ಪ್ರತಿಕೂಲ ಪರಿಣಾಮವನ್ನು ಕಡಿಮೆ ಮಾಡಲು ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ‌ ನೀಡಲಾದ ಸಲಹೆ ಸೂಚನೆಗಳನ್ನು ಪಾಲಿಸುವ ನಿಟ್ಟಿನಲ್ಲಿ ಸಾರ್ವಜನಿಕರು‌‌ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ‌ ಡಾ.ಆನಂದ ಕೆ. ಅವರು ಮನವಿ ಮಾಡಿದ್ದಾರೆ.

ರಾಜ್ಯದ ಕೆಲ‌ ಜಿಲ್ಲೆಗಳಲ್ಲಿ 3 ರಿಂದ 6 ದಿನಗಳವರೆಗೆ ಬಿಸಿಗಾಳಿಯ ಪ್ರಭಾವ ಕಂಡುಬರುವ ಸಾಧ್ಯತೆಯಿದೆ. ತೀವ್ರ ತಾಪಮಾನವು ಸಾರ್ವಜನಿಕರ ಆರೋಗ್ಯದ ಮೇಲೆ, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಅನಾರೋಗ್ಯ ಪೀಡಿತರ ಮೇಲೆ ಗಂಭೀರ ಪರಿಣಾಮ ಬೀರಬಹುದು. ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಮತ್ತು ಹೀಟ್ ಸ್ಟ್ರೋಕ್ ತಡೆಗಟ್ಟಲು ಮತ್ತು ತಗ್ಗಿಸಲು ಸಾರ್ವಜನಿಕರು ಗಮನ ಹರಿಸಬೇಕು ಎಂದವರು ತಿಳಿಸಿದ್ದಾರೆ.

ಗರಿಷ್ಠ ತಾಪಮಾನದ ಅವಧಿಯಲ್ಲಿ ಅದರಲ್ಲೂ ಮಧ್ಯಾಹ್ನ 12 ರಿಂದ 3 ರವರೆಗೆ
ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು ಎಂದವರು ತಿಳಿಸಿದ್ದಾರೆ.‌

ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವ ಅನಿವಾರ್ಯತೆಯಿದ್ದರೆ ರಕ್ಷಣೆಗಾಗಿ ಕನ್ನಡಕ, ಛತ್ರಿ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆ ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ನಿಲ್ಲಿಸಬೇಕು ಎಂದವರು ತಿಳಿಸಿದ್ದಾರೆ.

ಪೂರ್ವಾಹ್ನ 11 ರಿಂದ ಸಂಜೆ 4 ಗಂಟೆ ಅವಧಿಯಲ್ಲಿ ಹೊರಾಂಗಣ ಸಭೆಗಳು, ಚಟುವಟಿಕೆಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆ ನೀಡಲು ಅಗತ್ಯ ಶಾಮಿಯಾನ, ಪೆಂಡಾಲ್‌ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು.‌ ಸಭಿಕರಿಗೆ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.‌

ಪ್ರಯಾಣದೊಟ್ಟಿಗೆ ಸಾಕಷ್ಟು ನೀರಿರಲಿ.‌ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಪಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯ ಸೇವಿಸುವುದು ಬೇಡ. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು ಎಂದವರು ತಿಳಿಸಿದ್ದಾರೆ.

ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳು ಹಾಗೂ ಸಾಕುಪ್ರಾಣಿಗಳನ್ನು ಬಿಡಬೇಡಿ.‌ ಮೂರ್ಚೆ ಅಥವಾ ಅನಾರೋಗ್ಯ ಎನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓಆರ್ ಎಸ್ ಸೇವಿಸಬೇಕು.

ಹೆಚ್ಚಿನ ನೀರಿನಂಶ ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ತರಕಾರಿ ಸೊಪ್ಪು, ಎಳೆನೀರು ಹೆಚ್ಚಾಗಿ ಸೇವಿಸಬೇಕು ಎಂದವರು ತಿಳಿಸಿದ್ದಾರೆ.

ಜೊತೆಗೆ ಸಾಕು ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು‌ಡ ಕಲ್ಪಿಸಬೇಕು ಎಂದೂ ಜಿಲ್ಲಾಧಿಕಾರಿ ತಿಳಿಸಿದ್ದಾರೆ.‌

ಇಡೀ ಮನೆ ತಂಪಾಗಿರಿಸಲು ಪರದೆ, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು.‌ ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ, ಟೋಪಿ, ಕ್ಯಾಪ್, ಹೆಡ್ ಕವರ್, ಹ್ಯಾಂಡ್ ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟೋಲೈಟ್/ಗ್ಲೋಕೋಸ್, ಓಆರ್ ಎಸ್‌ ಒಳಗೊಂಡಿರುವ ಕಿಟ್ ಒಯ್ಯಬೇಕು.‌

ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ ಬಳಲಿಕೆ ಅಥವಾ ಶಾಖದ ಅಘಾತದಂತಹ (ಸನ್ ಸ್ಟ್ರೋಕ್) ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆಯಿದೆ.‌ ತಾಪಮಾನಕ್ಕೆ ತುತ್ತಾದ ವ್ಯಕ್ತಿಯನ್ನು ನೆರಳಿನಡಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆ ಬಟ್ಟೆಯಿಂದ ಮೈಒರೆಸುವುದು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕಬೇಕು ಎಂದವರು‌ ತಿಳಿಸಿದ್ದಾರೆ.‌

ರೋಗ ಲಕ್ಷಣಗಳು ಉಲ್ಬಣಗೊಂಡರೆ ಅಥವಾ ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾಧಿಕಾರಿ‌ ಡಾ. ಆನಂದ ಕೆ.‌ಅವರು‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";