ವಿಜಯಪುರ: ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಜನವರಿ 19 ರಂದು ತಾಂಡಾಗಳನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿ ಹಕ್ಕುಪತ್ರ ನೀಡಲಾಗುತ್ತಿದೆ ಎಂದು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ ಹೇಳಿದರು ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ, ರಾಯಚೂರ, ಯಾದಗಿರಿ, ಬೀದರ ಮತ್ತು ಕಲಬುರಗಿ ಗಡಿಭಾಗದ ತಾಂಡಾ ಸೇರಿ ಒಟ್ಟು 50 ಸಾವಿರ ಹಕ್ಕುಪತ್ರ ನೀಡಲಾಗುತ್ತಿದೆ. 250 ಕ್ಕೂ ಅಧಿಕ ತಾಂಡಾಗಳು ಕಂದಾಯ ಗ್ರಾಮಗಳಾಗಿ ಘೋಷಿಸಲಾಗುತ್ತಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ ಮಾಡಿರಲಿಲ್ಲ. ಹೀಗಾಗಿ ಇದೊಂದು ದೊಡ್ಡ ಸವಾಲಾಗಿತ್ತು. ಈವರೆಗೂ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸಿರಲಿಲ್ಲ ಎಂದರು.