ವಿಜಯಪುರ: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಪ್ರತಿಭಟನಾ ಸಭೆ ನಡೆಸಿದರು. ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಇಂದ್ರೇಶ ಜೈನ್, ನೇಮನಾಥ ಬಾಗೇವಾಡಿ ಕೇಸ ಮಂಡನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ವೇಳೆ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೈನಮುನಿಗಳ ಬರ್ಬರ ಹತ್ಯೆಯನ್ನು ಕೂಡಲೇ ಸಿಬಿಐಗೆ ನೀಡಿ, ಕೊಲೆ ಹಿಂದಿರುವ ಸತ್ಯಾಸತ್ಯತೆ ಬಯಲಿಗೆ ತರಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಬಿಜೆಪಿ ಮುಖಂಡರು, ಮಹಾನಗರ ಪಾಲಿಕೆ ಸದಸ್ಯರು, ಕಾರ್ಯಕರ್ತರು, ಜೈನ್ ಸಮುದಾಯದ ಮುಖಂಡರು ಭಾಗವಹಿಸಿದ್ದರು.