ವಿಜಯಪುರ: ಉತ್ತರ ಕರ್ನಾಟಕ ಅಭಿವೃದ್ಧಿಗೆ ಶಾಸಕರು ಸ್ಪಂದನೆ ನೀಡುತ್ತಿಲ್ಲ ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಯಾಸೀನ್ ಜವಳಿ ಆರೋಪಿಸಿದರು. ವಿಜಯಪುರ ನಗರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಾರೊಬ್ಬರೂ ಸಹಕಾರ ನೀಡುತ್ತಿಲ್ಲ. ಬೆಂಗಳೂರಿನಲ್ಲಿರುವ ಆಲಮಟ್ಟಿ ಕಚೇರಿಯನ್ನು ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಆದ್ರೂ, ಕೋರ್ಟ್ ಆದೇಶವನ್ನು ಆಲಮಟ್ಟಿ ಅಧಿಕಾರಿಗಳು ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಅಲ್ಲದೇ, ಜುಲೈ 26 ರಂದು ಆಲಮಟ್ಟಿಯಲ್ಲಿ ಸಲಹಾ ಸಮಿತಿಯ ಅಧ್ಯಕ್ಷ, ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವ ಸಿಸಿ ಪಾಟೀಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಮೀಟಿಂಗ್ ನಲ್ಲಿ ಹಣ ಹೊಡೆಯುವ ಹುನ್ನಾರ ಮಾಡುತ್ತಾರೆ ಎಂದು ಆರೋಪ ಮಾಡಿದರು. ಅದಕ್ಕಾಗಿ ಇಂತಹ ಕೆಲಸಕ್ಕೆ ಕೈ ಹಾಕದೇ ಜನತೆ, ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಸರ್ಕಾರ, ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.