ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿನಲ್ಲಿ ಮಾತನಾಡಿದ ಅವರು, ಶಿಕ್ಷಕರು ಶಿಕ್ಷಣ ಇಲಾಖೆಯ ಶಕ್ತಿ. ಅತಿಥಿ ಶಿಕ್ಷಕರನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವುದು ತಾತ್ಕಾಲಿಕ ಪರಿಹಾರ ಆಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 58,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಅಲ್ಲದೇ, ಕಳೆದ ಸರ್ಕಾರದ ಅವಧಿಯಲ್ಲಿ 13,351 ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಇನ್ನೂ ಕೆಲವರು ಕೋರ್ಟ್ ಮೊರೆ ಹೋಗಿದ್ದಾರೆ. ಇದರಿಂದ ಸ್ಥಳ ನಿಯೋಜನೆ ಆದೇಶ ವಿಳಂಬವಾಗಿದೆ. ಹೀಗಾಗಿ ಕಾನೂನು ನೆರವು ಪಡೆದು ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.