ವಿಜಯಪುರ: ಶಾಸಕರಾದ ಯತ್ನಾಳ, ಎಂಬಿ ಪಾಟೀಲ ಒಂದೇ ನಾಣ್ಯದ ಎರಡು ಮುಖಗಳು ಎಂದು ಆಮ್ ಆದ್ಮಿ ಪಾರ್ಟಿಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇವರ ನಿರ್ಲಕ್ಷ್ಯದಿಂದಾಗಿ ವಿಜಯಪುರ ನಗರ ಅಭಿವೃದ್ಧಿ ಆಗಿಲ್ಲ. ದೆಹಲಿಯಲ್ಲಿ ಬದಲಾವಣೆ ತಂದಿದ್ದೇವೆ. ಇದೀಗ ಪಂಜಾಬ್ ರಾಜ್ಯದಲ್ಲಿ ಎಎಪಿ ಸರ್ಕಾರ ಬದಲಾವಣೆ ಆಗಿದ್ದು, ಅಲ್ಲಿನ ಬಡವರ್ಗದವರು ನೆಮ್ಮದಿಯ ಜೀವನ ಸಾಗಿಸುವಂತೆ ಮಾಡುತ್ತಿದ್ದೇವೆ. ಅದೇ ಮಾದರಿಯಲ್ಲಿ ನಾವು ಕರ್ನಾಟಕದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿ ಜನಪರ ಸರ್ಕಾರವನ್ನು ತರುವ ಗುರಿಯನ್ನು ಹೊಂದಿದ್ದೇವೆ. ವಿಜಯಪುರ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳ ದೊಂಬರಾಟದಿಂದ ಬೇಸತ್ತಿದ್ದು, ಬದಲಾವಣೆಯನ್ನು ಬಯಸಿದ್ದಾರೆ. ಈ ಬದಲಾವಣೆಗೆ ಪರ್ಯಾಯ ಶಕ್ತಿಯೆಂದರೆ ಎಎಪಿ ಆಗಿದೆ ಎಂದರು.
ಅಲ್ಲದೇ, ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಎದುರಿಸಲು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸಜ್ಜಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಜಿಲ್ಲೆಯಲ್ಲಿ ಕಳೆದ ಹಲವಾರು ದಶಕಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಒಳಒಪ್ಪಂದ ಮಾಡಿಕೊಂಡಿದೆ. ಇದರ ಪರಿಣಾಮ ನಗರ ಅಭಿವೃದ್ಧಿ ಕುಂಠಿತವಾಗಿದೆ. ನಗರಾದ್ಯಂತ ರಸ್ತೆ, ಕುಡಿಯುವ ನೀರು, ಚರಂಡಿ, ಸ್ವಚ್ಛತೆ, ಶಿಕ್ಷಣ, ಆರೋಗ್ಯ ಸೇರಿದಂತೆ ಇನ್ನಿತರ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.