ವಿಜಯಪುರ: ನಗರದ ಆನಂದ ಮಹಲ್ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜನಪರ ಉತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಹೇಳಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊವೀಡ್ ಕಾರಣದಿಂದ ಕಳೆದ ಎರಡು ವರ್ಷ ನಮ್ಮ ಇಲಾಖೆಯಿಂದ ಯಾವುದೇ ಕಾರ್ಯಕ್ರಮಗಳನ್ನು ಹಾಕಿಕೊಂಡಿರಲಿಲ್ಲ. ವಿಶೇಷ ಘಟಕ ಯೋಜನೆಯಲ್ಲಿ ಈಗ `ಜನಪರ ಉತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಕಲಾವಿದರು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ್, ಬಸವೇಶ್ವರ ವೃತ್ತ ಮಾರ್ಗವಾಗಿ ಆನಂದ ಮಹಲ್ ಆವರಣಕ್ಕೆ ಕಲಾ ಮೇಳಗಳ ಮೇರವಣೆ ನಡೆಸಲಿದ್ದಾರೆ. ಸಂಜೆ ಜನಪರ ಉತ್ಸವ ಪ್ರಾರಂಭವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಮುಖ್ಯ ಅಥಿತಿಗಳಾಗಿ ಅಗಮಿಸಲಿದ್ದಾರೆ. ಇನ್ನುಳಿದಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ, ಸಂಸದ ರಮೇಶ ಜಿಗಜಿಣಗಿ, ಶಾಸಕ ಶಿವಾನಂದ ಪಾಟೀಲ, ಶಾಸಕ ಎಂ.ಬಿ.ಪಾಟೀಲ, ಶಾಸಕ ಯಶವಂತರಾಯಗೌಡ ಪಾಟೀಲ, ಶಾಸಕ ಸೋಮನಗೌಡ ಪಾಟೀಲ, ಶಾಸಕ ದೇವಾನಂದ ಚವ್ಹಾಣ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಶಾಸಕ ರಮೇಶ ಭುಸನೂರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.